ಉಡುಪಿ : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಮಹಿಷ ದಸರಾ ಆಚರಣೆಯ ಪರ, ವಿರೋಧ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದು, ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸಿ, ಅಕ್ಟೋಬರ್ 14ರ ಬೆಳಗ್ಗೆ 6ರಿಂದ ಅಕ್ಟೋಬರ್ 15ರ ಸಂಜೆ 6ರ ವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಈ ವೇಳೆ ಘೋಷಣೆ ಕೂಗುವುದು, ಭಾಷಣ ಮಾಡುವುದು, ಹಾಡು, ಗಾಯನದ ಮೂಲಕ ಪ್ರಚೋದಿಸುವುದು ಹಾಗೂ ಭಿತ್ತಿಪತ್ರ ಅಂಟಿಸುವಂತಿಲ್ಲ. ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಪಟಾಕಿ ಸಿಡಿಸುವುದು, ಸ್ಫೋಟಕ ಒಯ್ಯುವುದಕ್ಕೂ ನಿರ್ಬಂಧ ಹೇರಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.