Visitors have accessed this post 119 times.

‘ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್’ – ಹೆಬ್ಬಾಳಕರ್

Visitors have accessed this post 119 times.

ಬೆಳಗಾವಿ:  ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ತಾಲೂಕಿನ ಹಲಗಾದಲ್ಲಿ ಬುಧವಾರ ಗೃಹಲಕ್ಷ್ಮೀ ಅದಾಲತ್‍ಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಡಿ.29ರವರೆಗೆ ವಿಶೇಷ ಶಿಬಿರಗಳು ರಾಜ್ಯಾದ್ಯಂತ ನಡೆಯಲಿವೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಯೋಜನೆಯ ಫಲಾನುಭವಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.

ಬೆಳಗಾವಿ ಜಿಲ್ಲೆಯಲ್ಲಿಯೇ ಸುಮಾರು 11 ಲಕ್ಷ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿದ್ದಾರೆ. ತಿಂಗಳಿಗೆ 202 ಕೋಟಿ ಹಣವನ್ನು ನೀಡಲಾಗುತ್ತಿದೆ. ಹಲಗಾ ಗ್ರಾಮವೊಂದರಲ್ಲಿಯೇ 1600 ಫಲಾನುಭವಿಗಳಿದ್ದಾರೆ. ಹಲಗಾ ಗ್ರಾಮದ ಕೆಲ ಫಲಾನುಭವಿಗಳು ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ. ಕೆಲವರಿಗೆ ಬ್ಯಾಂಕ್ ಖಾತೆಯ ಸಮಸ್ಯೆ ಇದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ, ಕೆವೈಸಿ ಆಗಿಲ್ಲ, ಹೀಗೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಅವರಿಗೆ ಹಣ ಹೋಗಿಲ್ಲ. ವಿಶೇಷ ಶಿಬಿರದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಲವು ಫಲಾನುಭವಿಗಳನ್ನು ಸ್ವತಃ ಭೇಟಿಯಾಗಿ ಸಮಸ್ಯೆ ಆಲಿಸಿದರು. ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಬಾರಿ ಉಪ ನಿರ್ದೇಶಕಿ ರೇವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *