Visitors have accessed this post 155 times.
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಂತ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಏನಿದು ಯುವನಿಧಿ ಯೋಜನೆ.?
ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಈ ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ.