ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ.

ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಕೆಲಸ ನಡೆಯುತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದರು.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.

Leave a Reply