Visitors have accessed this post 451 times.
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕೆಂದು ಸೌಜನ್ಯಾ ತಂದೆ ಚಂದಪ್ಪ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ನೋಟಿಸ್ ಜಾರಿಗೊಳಿಸಿದೆ. ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥ ಡಿಜಿಪಿ, ಅಪರಾಧ ವಿಭಾಗದ ಎಡಿಜಿಪಿ ಮತ್ತು ಐಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ಠಾಣೆ ಇನ್ ಸ್ಪೆಕ್ಟರ್ ಅವರಿಗೂ ನೋಟಿಸ್ ಗೊಳಿಸಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ನೇಮಕ ಮಾಡಬೇಕು. ಅಲ್ಲದೆ, ನೈಜ ಆರೋಪಿಗಳ ಪತ್ತೆಯಾಗದಂತೆ ಸಾಕ್ಷ್ಯ ನಾಶ ಮಾಡಿರುವ ತನಿಖಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಕೇಳಿಕೊಂಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ಮಾಡಿದೆ. ಈಗಾಗಲೇ ಪ್ರಕರಣದ ಆರೋಪಿಯೆಂದು ಗುರುತಿಸಿರುವ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಾಕಿಯಿದೆ. ಇದೇ ವೇಳೆ, ಮರು ತನಿಖೆಯ ಅರ್ಜಿಯನ್ನೂ ವಿಭಾಗೀಯ ಪೀಠದ ಮುಂದೆ ಇರಿಸಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಪೀಠವು, ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿ ಅವರಿಂದ ಪಡೆಯುವಂತೆ ಕೋರ್ಟ್ ರಿಜಿಸ್ಟ್ರಾರ್ ಗೆ ಸೂಚಿಸಿದೆ.