ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ : ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ..!

ಬೆಂಗಳೂರು : ರಾಜ್ಯದ 1-10 ತರಗತಿ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ವಾರದಲ್ಲಿ ಮೂರು ದಿನ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ.

ಸರಕಾರಿ ಮತ್ತು ಶಾಲೆಗಳ ಒಂದರಿಂದ ಅನುದಾನಿತ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ವಾರದಲ್ಲಿ ಮೂರು ದಿನ ಕ್ಷೀರಭಾಗ್ಯ ಯೋಜನೆಯ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ರಾಗಿ ಹೆಲ್ತ್ ಮಿಕ್ಸ್ ನ್ನು ಮಕ್ಕಳಿಗೆ ನೀಡಲಾಗುತ್ತದೆ .

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು. ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ.

ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದರು.

Leave a Reply