ಮಂಗಳೂರು : ಪಾಕ್ ಪರ ಘೋಷಣೆ ಕೂಗಿರುವುದನ್ನು ವಿರೋಧಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನೂರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದರು. ಮುತ್ತಿಗೆ ಸುಳಿವು ಅರಿತ ಪೊಲೀಸರು ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಚೇರಿಗೆ ಮುಂಭಾಗ ಬ್ಯಾರಿಕೇಡ್ ಅಳವಡಿಸಿ ಭದ್ರತೆಯನ್ನು ಒದಗಿಸಿದ್ದರು. 290-250 ಕ್ಕೂ ಅಧಿಕ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದರು. ಬಿಜೆಪಿ ಕಾರ್ಯಕರ್ತರು ಏಕಾಏಕಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾ ಕಾರರನ್ನು ಅಲ್ಲೇ ತಡೆದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.