ನೀತಿ ಸಂಹಿತೆ ಉಲ್ಲಂಘನೆ ಆರೋಪ : ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣವೇ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡು ನಂಟಿನ ಆರೋಪ ಮಾಡಿರುವ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆಗೆ ಸಂಕಷ್ಟ ಎದುರಾಗಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿರುವ ಶೋಭಾ ವಿರುದ್ಧ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ದೂರು ದಾಖಲಿಸಿದೆ. ಈ ದೂರಿನ ಕುರಿತು ತಕ್ಷಣವೇ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಸೂಚಿಸಿದೆ. ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ ಕರಂದ್ಲಾಜೆ ಮಾರ್ಚ್​ 19ರಂದು ಆರೋಪಿಸಿದ್ದರು. ಈ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ, ಈ ಸಂಬಂಧ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಚುನಾವಣೆ ಆಯೋಗಕ್ಕೆ ದೂರು ನೀಡಿ, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಇದೀಗ ಚುನಾವಣಾ ಆಯೋಗವು ಈ ವಿಷಯದ ಬಗ್ಗೆ 48 ಗಂಟೆಗಳ ಕ್ರಮ ಜರುಗಿಸಿ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಆದೇಶಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ವ್ಯಕ್ತಿಯ ವಿರುದ್ಧ ಚುನಾವಣಾ ಆಯೋಗದ ಕ್ರಮಕ್ಕೆ ಆದೇಶಿಸಿದ ಮೊದಲ ಪ್ರಕರಣ ಇದಾಗಿದೆ.

Leave a Reply