ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ. ಬ್ಯಾಂಕ್ ಮಾರ್ಚ್ 2024ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಕೆ ದಾಖಲಿಸಿದೆ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ಮಿಲಾಗ್ರಿಸ್‌ನ ಸೆನೆಟ್ ಹಾಲ್‌ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಸಿಸಿ ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ ಎಂದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಪ್ರಸಕ್ತ ವರ್ಷ ಬ್ಯಾಂಕ್ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿದೆ. ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕ್‌ನ 17ನೇ ಶಾಖೆಯನ್ನು ತೆರೆಯಲಾಗಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು ಎಂದು ಅನಿಲ್ ಲೋಬೊ ಹೇಳಿದರು.