Visitors have accessed this post 225 times.

ಲೋಕಸಭಾ ಚುನಾವಣೆ; ಎ.24ರಿಂದ ದ.ಕ.ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ: ಡಿಸಿ ಮುಲ್ಲೈ ಮುಗಿಲನ್

Visitors have accessed this post 225 times.

ಮಂಗಳೂರು: ಭಾರತೀಯ ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆಯ ನಿಮಿತ್ತ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಎ.24ರ ಸಂಜೆ 6ರಿಂದ ಎ.26ರ ರಾತ್ರಿ 10ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್‌ಸ್ಟಾಲ್, ಸೈಬರ್‌ ಕೆಫೆಗಳನ್ನು ಕೂಡ ಮುಚ್ಚಲು ಸೂಚಿಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ಸಹಿತ ಮತ್ತಿತರ ಹಾನಿಕಾರಕ, ಅಪಾಯಕಾರಿ ವಸ್ತುಗಳನ್ನು ಮತದಾನ ಕೇಂದ್ರಕ್ಕೆ ಕೊಂಡು ಹೋಗುವುದನ್ನು ಮತ್ತು ಅಲ್ಲಿ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯನ ಮೃತದೇಹಗಳ/ಅವುಗಳ ಆಕೃತಿ/ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕ ಗಳನ್ನು ಬಳಸುವಂತಿಲ್ಲ. ಅಲ್ಲದೆ ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸು ವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಮತ್ತಿತರ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಮಾರಕಾಸ್ತ್ರಗಳನ್ನು ಮುಟ್ಟುಗೋಲು ಹಾಕಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರ ಅಥವಾ ಮದುವೆ ಮತ್ತಿತರ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆಯು ಅನ್ವಯಿಸುವುದಿಲ್ಲ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗ ಬೇಕಾಗುತ್ತದೆ. ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ ಮೊಬೈಲ್ ಫೋನು, ಕೋಡ್ರ್ಲೆಸ್ ಫೋನು ಅಥವಾ ಇನ್ನಿತರ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು (ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಸಿಬ್ಬಂದಿಗಳನ್ನು ಹೊರತುಪಡಿಸಿ) ನಿಷೇಧಿಸಲಾಗಿದೆ.

ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನೂ ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ಹೋಟೆಲ್‌ಗಳು ಮತ್ತು ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *