Visitors have accessed this post 406 times.
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿದೆ. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.