
ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಗರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಉಡುಪಿ ಜಿಲ್ಲೆಯ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇವರು ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜು ವ್ಯಾಸಂಗ ಮಾಡುತ್ತಿದ್ದರು. ಆದರೆ ಬುಧವಾರ ಬೆಳಗ್ಗೆ 10:30ರ ಸುಮಾರಿಗೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿತೇಶ್ ರಾವ್ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಇವರ ತಂದೆಯೂ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದರು. ಈ ಬಗ್ಗೆ ನಿತೇಶ್ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.


