ಮಂಗಳೂರು: ರಾಜ್ಯದ ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆರಕ್ಕೆ ಆರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ನ ಮುಖ್ಯಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರಾಗಿದ್ದವರು. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಕಳೆದ ಬಾರಿ ಕಡಿಮೆ ಮತಗಳಿಂದ ಸೋತವರು. ಆದ್ದರಿಂದ ಈ ಬಾರಿ ಇಬ್ಬರೂ ಸುಲಭವಾಗಿ ಜಯಗಳಿಸಲಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಯುವಜನರ ಮತ್ತು ಶಿಕ್ಷಕರಿಗೆ ಅನುಕೂಲವಾದ ಯೋಜನೆಗಳನ್ನು ಜಾರಿಗೊಳಿಸಿದೆ. ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಿದೆ ಎಂದು ಹೇಳಿದರು.