ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ನಿಗದಿತ ಅವಧಿಯಲ್ಲಿ ತನಿಖೆ ಮುಗಿದರೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಬಂಧನ ಭೀತಿಯಲ್ಲಿದ್ದ ಪ್ರಜ್ವಲ್, ಲೋಕಸಭಾ ಚುನಾವಣೆಯ ಮತದಾನದ ನಂತರ ದೇಶದಿಂದ ಪರಾರಿಯಾಗಿದ್ದರು. 35 ದಿನಗಳ ಬಳಿಕ ಜರ್ಮನಿಯಿಂದ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಬಂದಿಳಿದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್‌ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್‌ನನ್ನು ಬಂಧಿಸಿದರು.