
ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.


