ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಭವ್ಯ ಭಾರತದ ಭವಿಷ್ಯ ಬಲಿಷ್ಠಗೊಳ್ಳುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ಬೈಂದೂರಿನಲ್ಲಿ ಶನಿವಾರ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ಜಿಲ್ಲೆಯ 350 ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಗೆ 41,000 ಜತೆ ಉಚಿತ ಶಾಲಾ ಸಮವಸ್ತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಮಾತನಾಡಿ, ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ಮೂಲಕ ಹಲವು ವರ್ಷಗಳಿಂದ ಶೈಕ್ಷಣಿಕವಾಗಿ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಸೌಕರ್ಯದ ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ವರ್ಷ ಒಟ್ಟು 41 ಸಾವಿರ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ. ಜತೆಗೆ ಗಣಕಯಂತ್ರ, ಶೌಚಗೃಹ, ಕುಡಿಯುವ ನೀರು, ಕೊಠಡಿ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಒದಗಿಸುವ ಪ್ರಯತ್ನ ನಡೆಸುತ್ತಿದೆ ಎಂದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭಾಶಂಸನೆಗೈದರು. ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಎಚ್.ನಾಗರಾಜ ಶೆಟ್ಟಿ, ಮೊಳಹಳ್ಳಿ ದಿನೇಶ ಹೆಗ್ಡೆ ಉಪಸ್ಥಿತರಿದ್ದರು. ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಸ್ವಾಗತಿಸಿ, ಅಕ್ಷಯ್ ಹೆಗ್ಡೆ ಮೊಳವಳ್ಳಿ ನಿರೂಪಿಸಿ, ಶಿಕ್ಷಕ ರಾಜೀವ ಶೆಟ್ಟಿ ವಂದಿಸಿದರು. ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ನಿವೃತ್ತ ಶಿಕ್ಷಕ ಹಾಗೂ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಯು.ಟಿ.ಖಾದರ್, ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಿಸಲಾಯಿತು.