ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿಗೆ ಪೊಲೀಸ್ ನೋಟಿಸ್ ಜಾರಿ

ಮಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಕಾವೂರು ಠಾಣೆಯಲ್ಲಿ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಮೇಲೆ ಎಫ್ಐಆರ್‌ ದಾಖಲಾಗಿತ್ತು‌. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಜಾರಿಯಾಗಿದೆ. ಕಾವೂರು ಠಾಣೆಗೆ ಮೂರು ದಿನಗಳೊಳಗೆ ವಿಚಾರಣೆಗೆ ತನಿಖಾಧಿಕಾರಿ ಎದುರು ಹಾಜರಾಗಬೇಕೆಂದು ಕಾವೂರು ಠಾಣಾ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು ನೋಟಿಸ್ ಜಾರಿಗೊಳಿಸಿದ್ದಾರೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ರಾಹುಲ್ ಗಾಂಧಿಯವರನ್ನು ನಿಂದಿಸಿದ್ದಾರೆ‌. ಪಾರ್ಲಿಮೆಂಟ್ ಒಳಗೆ ಹೋಗಿ ಅವನ ಕಪಾಳಕ್ಕೆ ಬಾರಿಸಬೇಕು. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲ ಎಂದಿದ್ದ. ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂದು ಹೇಳಿದ್ದಾರೆಂದು ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು. ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನನ್ವಯ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply