ಬೆಂಗಳೂರು: ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.
ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಅಧಿವೇಶನದಲ್ಲಿ ಸುನೀಲ್ ಕುಮಾರ್ ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ನಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.