Visitors have accessed this post 415 times.
ಬೆಂಗಳೂರು: ಮುಡಾ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಬರ್ತಿದೆ. ನಿನ್ನೆ ರಾತ್ರಿ ದಿಢೀರ್ ಮುಡಾ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ಸೈಟ್ ವಾಪಸ್ ಮಾಡ್ತೀನಿ ಎಂದು ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡಿದ್ದಾರೆ ಇದು ನನಗೂ ಆಶ್ಚರ್ಯ ಉಂಟು ಮಾಡಿದೆ ಎಂದಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವ ಸಾರಾಂಶ ಹೀಗಿದೆ.. ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.
ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.