
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.



ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.