ಪ್ರವಾಸಕ್ಕೆಂದು ಬಂದು ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ – ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆಂದು ಬಂದು ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ವಿದ್ಯಾರ್ಥಿನಿಯರ ಮೃತದೇಹಗಳನ್ನು ಹೊರಕ್ಕೆ ತೆಗೆದಿವೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಮೃತದೇಹವನ್ನು ಬೋಟ್ ಮೂಲಕ ದಡಕ್ಕೆ ತರಲಾಯಿತು. ಡಿ. 10ರಂದು 7 ವಿದ್ಯಾರ್ಥಿನಿಯರು ಸಮುದ್ರಪಾಲಾಗಿದ್ದು, ಈ ಪೈಕಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಿಸಿದ್ದರು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ‌ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸಿಎಂ ಸೂಚಿಸಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Leave a Reply