
ಗುಜರಾತ್ : ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ ನಡೆಸುತ್ತಿದ್ದ ತಂಡ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಟ್ರಕ್ ಒಂದು ಡಿಕ್ಕಿ ಹೊಡೆದು ಇಬ್ಬರು ಸಾವನಪ್ಪಿದ ಘಟನೆ ಗುಜರಾತ್ ಮನ ಭರೂಚ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.



ಮೃತರನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ನಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಐದು ಜನರ ತಂಡ ಪಾದಯಾತ್ರ ನಡೆಸುತ್ತಿದ್ದರು. ಬುಧವಾರ 55ನೇ ದಿನ ಪಾದಯಾತ್ರೆ ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು.
ಈ ವೇಳೆ ಹೆದ್ದಾರಿ ಬದಿಯಲ್ಲಿ ನಿಂತು ವಿಶ್ರಾಂತಿ ಪಡೆಯತ್ತಿರುವಾಗ ಟ್ರಕ್ ಒಂದು ಇವರು ಕುಳಿತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿದೆ.