
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.



ಮಸೀದಿಯ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ 2024ರ ಸೆಪ್ಟೆಂಬರ್ 13ರಂದು ಹೈಕೋರ್ಟ್ ಆದೇಶಿಸಿತ್ತು.
ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣವನ್ನು ರದ್ದುಗೊಳಿಸುವಾಗ “ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿದ್ದಾರೆ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದಿದ್ದರು.
ಮಹೇಂದ್ರ ಸಿಂಗ್ ಧೋನಿ ವರ್ಸಸ್ ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ್ದ ನ್ಯಾಯಮೂರ್ತಿ, ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಹೇಳಿದ್ದರು.
ಪ್ರಕರಣದ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ 2023ರ ಸೆಪ್ಟೆಂಬರ್ 24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಅನ್ವಯ ಇಬ್ಬರು ಆರೋಪಿಗಳಾದ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು.
ಇದರ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿತ್ತು.