
ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ.



ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಬೀದರ್ ಜಿಲ್ಲೆಯ ಪರಮೇಶ್ವರ್, ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ಎಂಬವರು ಈಜಾಡಲು ನೀರಿಗೆ ಇಳಿದಿದ್ದಾರೆ. ಆ ಸಂದರ್ಭದಲ್ಲಿ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಪರಮೇಶ್ವರ್ ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹ ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ವೊಂದರಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.