
ಉಪ್ಪಿನಂಗಡಿ: ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಘಟನೆ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.



ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂದು ಗುರುತಿಸಲಾಗಿದೆ.
ಕಡಬ ತಾಲೂಕು ಬಂಟಿ ಗ್ರಾಮದ ನೆಕ್ಕಿತದ ನಿವಾಸಿ ಮುಸ್ತಫಾ ಅವರ ಪತ್ನಿ ಅಬೀಬಾ ಅವರು ಭಾವನ ಪತ್ನಿ ಹಸೀರಾಬಾನು ಮದುವೆ ಕಾರ್ಯಕ್ರಮಕ್ಕೆ ಹೊರಡುವ ಮೊದಲು ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಲೆಸ್ -1 ಮತ್ತು ಹಸೀರಾಬಾನುರವರ ಸುಮಾರು 106 ಗ್ರಾಂ ತೂಕದ ಚಿನ್ನಾಭರಣವನ್ನು ಒಂದು ಬಾಕ್ಸ್ ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡಿದ್ದರು. ಮದುವೆ ಮುಗಿಸಿ ಮನೆಗೆ ಬರುತ್ತಿದ್ದಾಗ ಬಸ್‌ನಲ್ಲಿ, ಇವರ ಬ್ಯಾಗಿನ ಜಿಪ್ ತೆರೆದಿರುವುದು ಕಂಡು ಬಂದಿತ್ತು. ಪರಿಶೀಲಿಸಿದಾಗ ಅದರಲ್ಲಿದ್ದ ಚಿನ್ನದ ಬಾಕ್ಸ್ ಕಳವಾಗಿತ್ತು.
ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು, ಬ್ಯಾಗ್ ಕಳವು ಮಾಡುವುದರಲ್ಲಿ ಕುಖ್ಯಾತಿ ಗಳಿಸಿದ್ದ ನಸೀಮಾಳನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದಾಗ ಕಳವು ನಡೆಸಿರುವುದನ್ನು ಒಪ್ಪಿಕೊಂಡಳು.