
ಮೈಸೂರು: ಇಲ್ಲಿನ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ.



ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದ ಲ್ಲಿ ಸುರೇಶ್ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು.
ಚಿತ್ರ ವೈರಲ್ ಆಗುತ್ತಿದ್ದಂತೆ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ. ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕೆಲವರಿಗೆ ಕಲ್ಲೇಟಿನಿಂದ ಗಾಯವಾಗಿದೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರರಸ್ತೆಬಂದ್ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರ ಅರೆನಗ್ನ ಫೋಟೊ ಸೃಷ್ಟಿಸಿ, ಅವರ ತೊಡೆಯಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುತ್ತಿರುವಂತೆ, ಬುರ್ಖಾ ಧರಿಸಿದ ಮಹಿಳೆಯಂತೆ ಚಿತ್ರಿಸಿದ್ದಾರೆ. ಮೈ ತುಂಬಾ ಅರೇಬಿಕ್ ಬರಹಗಳನ್ನು ಹಾಕಿದ್ದು, ಅದಕ್ಕೆ ತ್ರೀ ಈಡಿಯೆಟ್ಸ್ ಎಂಬ ಶೀರ್ಷಿಕೆ ನೀಡಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಲಾಗಿದೆ.