October 13, 2025
WhatsApp Image 2025-05-22 at 10.17.50 AM

ಮಂಗಳೂರು: ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿ ಬಜಪೆ ಜರಿನಗರ ನಿವಾಸಿ ಅಹ್ಮದ್‌ ಬಾವ ಎಂಬವರ ಪುತ್ರ ಕೊಣಾಜೆ ಬಳಿಯ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ಮೂರನೇ ವರ್ಷದ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದ ಫಹದ್‌ ಅಹ್ಮದ್‌ (22) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಪರಿಣಾಮ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.

ಫಹದ್‌ ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಜ್ಪೆಯಿಂದ ತನ್ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೊಂದೇಲ್‌ ಬಳಿ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್‌ ಕಾರೊಂದು ಬಂದಿದ್ದು, ಅದರ ಸೈಡ್‌ ಮಿರರ್‌ ಫಹದ್‌ ಅವರಿಗೆ ತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಅವರ ಬೈಕ್‌ ರಸ್ತೆ ಬದಿಯ ಫುಟ್‌ಪಾತ್‌ನಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಅಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯಿತ್ತಲೇ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರತ್ಯಕ್ಷದರ್ಶಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಾರಿಯಾಗಿದ್ದ ಕಾರನ್ನು ತೊಕ್ಕೊಟ್ಟುವಿನಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

About The Author

Leave a Reply