

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್.ಎಂ ಮತ್ತು ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988ರಡಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆ ಸಮಯದಲ್ಲಿ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಆದರೆ, ತಹಶೀಲ್ದಾರ್ ಕೂಡಲಗಿ ಅವರು ತಲೆಮರೆಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ, ಕೂಡಲಗಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಎಸ್.ಜಿ. ಅವರು ವಿಚಾರಣೆ ನಡೆಸಿ, ಜಾಮೀನು ನಿರಾಕರಿಸಿ ತೀರ್ಪು ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತ, ಮಂಗಳೂರು ಪೊಲೀಸ್ ಅಧೀಕ್ಷಕ ಶ್ರೀ ಕುಮಾರ ಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ರವೀಂದ್ರ ಮುನ್ನಿಪ್ಪಾಡಿ ಅವರು ವಾದ ಮಂಡಿಸಿದ್ದರು.