

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಅಕ್ಟೋಬರ್30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಧಾರ್ಮಿಕ ದ್ವೇಷ ಪ್ರಚೋದನೆ ಮತ್ತು ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25 ರಂದು ಪುತ್ತೂರು ತಾಲೂಕಿನ ಈಶ್ವರಿ ಪದ್ಮುಂಜ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇತ್ತೀಚೆಗೆಉಪ್ಪಳಿಗೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರ ಭಾಷಣವು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖದ ಮೂಲಕ ಧಾರ್ಮಿಕ ವೈಮನಸ್ಸು ಸೃಷ್ಟಿಸಲು ಪ್ರಯತ್ನಿಸಿದೆ ಎಂಬ ಗಂಭೀರ ಆರೋಪವಿದೆ. ಭಾಷಣವು ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿತ್ತು.






