

ಮಂಗಳೂರು: ಉಳ್ಳಾಲದಲ್ಲಿ ನಾಯಿ ದಾಳಿಯಿಂದ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಎಂಎಲ್ ಸಿ ಐವನ್ ಡಿಸೋಜಾ ಕೆಡಿಪಿ ಸಭೆಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಳ್ಳಾಲದಲ್ಲಿ ನಡೆದ ನಾಯಿ ದಾಳಿ ಕುರಿತಂತೆ ಚರ್ಚೆ ನಡೆದಿದೆ. ಈ ವೇಳೆ ಮಾತನಾಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ಬೀದಿ ನಾಯಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು ಮತ್ತು ಅವುಗಳ ಶಾಶ್ವತ ವಸತಿಗಾಗಿ ವ್ಯವಸ್ಥೆ ಮಾಡಬೇಕು” ಎಂದು ಅವರು ಹೇಳಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶದ ಹಲವು ಕಡೆ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಶಾಲಾ ಆವರಣ, ಸುತ್ತುಮುತ್ತಲಿನ ಪ್ರದೇಶಗಳಲ್ಲೂ ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳು, ಪೋಷಕರು ಆತಂಕದಿಂದಲೇ ಓಡಾಡುವಂತಾಗಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಇತರ ಶಾಸಕರು ಹಾಗೂ ನಾಮನಿರ್ದೇಶಿತ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಮೃತ ವ್ಯಕ್ತಿ ಕುಟುಂಬಕ್ಕೆ ಪರಿಹಾ ನೀಡುವ ಚರ್ಚೆಯ ವೇಳೆ ಪ್ರತಿಕ್ರಿಯಿಸಿದ ಅಧಿಕಾರಿ ಡಾ. ಅರುಣ್ ಕುಮಾರ್, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಯಿ ಕಡಿತಕ್ಕೆ 5000 ರೂ. ಪರಿಹಾರ ಹಾಗೂ ಮೃತಪಟ್ಟಲ್ಲಿ 5 ಲಕ್ಷ ರೂ.ವರೆಗೆ ಪರಿಹಾರ ನೀಡುವ ಅವಕಾಶ ಇದೆ ಎಂದರು.






