

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದ AKMS ಬಸ್ ಮಾಲೀಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ 103 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಕರಣದ ಇನ್ನೋರ್ವ ಆರೋಪಿಯಾದ ಮಾಲಿ ಮೊಹಮ್ಮದ್ ಸಿಯಾನ್ (31) ಇತನನ್ನು ದಿನಾಂಕ 15/12/2025ರಂದು ಬೆಳಿಗ್ಗೆ 10.30 ಗಂಟೆಗೆ MGM ಕಾಲೇಜು ಬಸ್ ನಿಲ್ದಾಣದ ಬಳಿ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್ ಮತ್ತು ಪಿಸಿ ಶರಣಬಸಪ್ಪ ಅವರು ದಸ್ತಗಿರಿ ಮಾಡಿದ್ದಾರೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ KA20 MF 207 ಸಂಖ್ಯೆಯ ಗ್ಲಾಂಜಾ ಕಾರು ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.






