

ಮಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಖಂಡಿಸಿ ಮಂಗಳೂರಿನ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಮುಂದಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು. ಅಲ್ಲದೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗ ನೂರಾರು ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮಲ್ಲಿಕಟ್ಟೆಯಿಂದ ಬಿಜೆಪಿ ಕಚೇರಿಯತ್ತ ಮೆರವಣಿಗೆಯ ಮೂಲಕ ತೆರಳಲು ಯತ್ನಿಸಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದರು.
ಪ್ರತಿಭಟನಾಕಾರರು ಮಲ್ಲಿಕಟ್ಟೆ ವೃತ್ತಕ್ಕೆ ತಲುಪುತ್ತಿದ್ದಂತೆ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಮೂರು ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.






