

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ವೇಳೆ ಹೊಸ ಹೆದ್ದಾರಿ ಕಾಮಗಾರಿಗಾಗಿ ನಿರ್ಮಿಸಲಾಗುತ್ತಿದ್ದ ಮೋರಿಗೆ ಕಾರು ಢಿಕ್ಕಿ ಹೊಡೆದಿದೆ.
ಢಿಕ್ಕಿ ಸಂಭವಿಸಿದ ತಕ್ಷಣ ಕಾರಿನ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡಿದ್ದು, ಬೆಂಕಿ ಹತ್ತಿಕೊಂಡು ವ್ಯಾಪಿಸಿದೆ. ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಕೂಡಲೇ ವಾಹನದಿಂದ ಹೊರಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪುತ್ತೂರಿನಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನ ಮುಂಭಾಗವು ಬೆಂಕಿಯಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ.






