

ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಅಂಕೋಲಾದಲ್ಲಿ ನಡೆದಿದೆ.
ಗೋಪಾಲಕೃಷ್ಣ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಬಳಿ ಕಾರಿನಲ್ಲಿ ತೆರಳುತಿದ್ದಾಗ ಗೋವಾ ನೋಂದಣಿಯ ಕಾರಿನಲ್ಲಿ ಬಂದ ಕಿಡಿಗೇಡಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಬಳಿಕ ರಾಡ್ ನಿಂದ ಹೊಡೆದು ಚಾಕು ಇರಿದಿದ್ದಾರೆ. ಅವರ ತಲೆಗೆ, ಕುತ್ತಿಗೆಗೆ ಪೆಟ್ಟಾಗಿದೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕ ಅವರನ್ನು ಚಿಕಿತ್ಸೆಗಾಗಿ ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾಂಸದ ವ್ಯಾಪಾರಿಗಳ ಕೈಯಿಂದ ಪಾರಾಗಿ 17 ಕಿ.ಮೀ ನಡೆದು ಮನೆ ಸೇರಿದ 7 ನಾಯಿಗಳು! ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








