April 14, 2026
l2

ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖಾ ತಂಡವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೃತ್ಯದ ಸಂಚು ಮತ್ತು ಹಲ್ಲೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಅರ್ಶದ್ ಸೇರಿ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಏರಿಕೆಯಾಗಿದ್ದು, ಹತ್ಯೆಯ ಹಿಂದಿನ ವ್ಯವಸ್ಥಿತ ಸಂಚಿನ ಹೂರಣ ಒಂದೊಂದಾಗಿ ಬಯಲಾಗುತ್ತಿದೆ.

ಬಂಧಿತರ ಪೈಕಿ ಅರ್ಶದ್ ಈ ಕೊಲೆ ಕೃತ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈತ ಹಂತಕರಿಗೆ ಮಾರಕಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ ಬಗ್ಗೆ ನಿರಂತರ ಮಾಹಿತಿ ನೀಡುತ್ತಿದ್ದನು. ಅಷ್ಟೇ ಅಲ್ಲದೆ, ಕೃತ್ಯದ ನಂತರ ಆರೋಪಿಗಳು ತಲೆಮರೆಸಿಕೊಳ್ಳಲು ಹಣಕಾಸಿನ ನೆರವು ಮತ್ತು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಮೂಲಕ ಸಂಚಿನ ಪ್ರಮುಖ ಸೂತ್ರಧಾರಿಯಾಗಿ ಕಾರ್ಯನಿರ್ವಹಿಸಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಬಂಧಿತ ಇತರ ಇಬ್ಬರು ಆರೋಪಿಗಳಾದ ಪುಚ್ಚೆ ನಿಸಾಕ್ ಮತ್ತು ಜುನೈದ್ ಈ ಹಿಂದೆಯೂ ಅರಿಫ್ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪುಚ್ಚೆ ನಿಸಾಕ್ ಎಂಬಾತ ಕಳೆದ ಫೆಬ್ರವರಿ ತಿಂಗಳಿನಲ್ಲಿ ಅರಿಫ್ ಮೇಲೆ ನಡೆಸಲಾಗಿದ್ದ ಹಲ್ಲೆ ಯತ್ನದಲ್ಲಿ ಭಾಗಿಯಾಗಿದ್ದಲ್ಲದೆ, 2022ರಲ್ಲಿಯೂ ಅರಿಫ್ ಮೇಲೆ ನಡೆದಿದ್ದ ದಾಳಿಯಲ್ಲಿ ಪಾಲ್ಗೊಂಡಿದ್ದ ಎನ್ನಲಾಗಿದೆ. ಇನ್ನೊಬ್ಬ ಆರೋಪಿ ಜುನೈದ್, ಫೆಬ್ರವರಿಯಲ್ಲಿ ನಡೆದಿದ್ದ ಹಲ್ಲೆ ಯತ್ನದ ವೇಳೆ ತಂಡಕ್ಕೆ ವಾಹನ ಸೌಕರ್ಯ ಒದಗಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಅವರ ಬಂಧನದ ನಂತರ ಪ್ರಕರಣದ ಸಂಪೂರ್ಣ ವಿವರಗಳನ್ನು ನೀಡುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

About The Author

Leave a Reply