April 28, 2026
WhatsApp Image 2026-04-28 at 9.27.18 AM

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ಬೆಂಗಳೂರಿನ ವಿಶೇಷ ಎನ್‌ಐಎ (NIA) ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಶಿಕ್ಷೆಯನ್ನು ಪ್ರಕಟಿಸಿದೆ.

ನವೆಂಬರ್ 19, 2022 ರಂದು ಮಂಗಳೂರಿನ ಕಂಕನಾಡಿ ಸಮೀಪ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ತನಿಖಾಧಿಕಾರಿಗಳ ವರದಿಯ ಪ್ರಕಾರ, ಆರೋಪಿ ಶಾರೀಕ್ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡು ಬಾಂಬ್ ಇಡಲು ತೆರಳುತ್ತಿದ್ದ. ಆದರೆ ಮಾರ್ಗಮಧ್ಯೆ ಗರೋಡಿ ಎಂಬಲ್ಲಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದ್ದರಿಂದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿತ್ತು.

ಈ ಸ್ಫೋಟದಲ್ಲಿ ಶಾರೀಕ್ ಸ್ವತಃ ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಅಮಾಯಕ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರೂ ತೀವ್ರವಾಗಿ ಗಾಯಗೊಂಡಿದ್ದರು. ಸುಮಾರು ಮೂರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಎನ್‌ಐಎ ಅಧಿಕಾರಿಗಳು ಶಾರೀಕ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸಿದ್ದರು.
ರಾಷ್ಟ್ರೀಯ ತನಿಖಾ ಸಂಸ್ಥೆಯು ಸಲ್ಲಿಸಿದ ಚಾರ್ಜ್‌ಶೀಟ್ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯವು, ದೇಶವಿರೋಧಿ ಕೃತ್ಯ ಎಸಗಲು ಯತ್ನಿಸಿದ ಆರೋಪಿಗೆ ಈಗ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

About The Author

Leave a Reply