

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ತೀವ್ರ ವದಂತಿಗಳ ಮಧ್ಯೆಯೇ, ಮೇ 28 ರ ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿಗಳು ಸಮಯ ಕೋರಿದ್ದಾರೆ ಎಂದು ಸಿಎಂ ಕಚೇರಿ (CMO) ಮೂಲಗಳು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರವೇ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಲಿದ್ದು, ತೆರವಾಗಲಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನುವ ರಾಜಕೀಯ ವದಂತಿಗಳು ರಾಜಧಾನಿಯ ಗಿಡಮೂಲಿಕೆಯಲ್ಲಿ ದಟ್ಟವಾಗಿ ಹರಡುತ್ತಿವೆ.

‘ನಾಳೆಯೇ ಎಲ್ಲವನ್ನೂ ಮಾತಾಡುತ್ತೇನೆ’ – ಸಿದ್ದರಾಮಯ್ಯ:
ನೆಹರು ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿರುವ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಾಳೆ ಎಲ್ಲವನ್ನೂ ಮಾತಾಡುತ್ತೇನೆ” ಎಂದು ಹೇಳುವ ಮೂಲಕ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಕಾಂಗ್ರೆಸ್ ಹಿರಿಯ ಮೂಲಗಳ ಪ್ರಕಾರ, ರಾಜ್ಯಪಾಲರ ಭೇಟಿಯ ವೇಳೆ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ಸಿಎಂ ನಿವಾಸಕ್ಕೆ ಸಚಿವರು, ಶಾಸಕರ ದಂಡು:
ರಾಜೀನಾಮೆ ವದಂತಿಗಳು ಹರಡುತ್ತಿದ್ದಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಸಚಿವರಾದ ಎಚ್.ಸಿ. ಮಹದೇವಪ್ಪ, ಬಿ.ಝಡ್. ಜಮೀರ್ ಅಹಮದ್ ಖಾನ್, ಈಶ್ವರ ಖಂಡ್ರೆ, ಸಂತೋಷ್ ಲಾಡ್ ಹಾಗೂ ಶಾಸಕರಾದ ನಂಜೇಗೌಡ, ಬಿ. ನಾಗೇಂದ್ರ, ಉಮೇಶ್ ಮೇಟಿ, ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಸುದೀರ್ಘ ಚರ್ಚೆ ರಾಜೇಂದ್ರ ರಾಜಣ್ಣ ಸಹ ಸಿಎಂ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.






