June 12, 2026
agumbe-ghat-1

ಶಿವಮೊಗ್ಗ : ಮಳೆಗಾಲದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಆಗುಂಬೆ ಘಾಟ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ-169ಎ) ಇದೇ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತದ ನಂತರ ಅಲ್ಲಿನ ದುರಸ್ತಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ವಿಪರೀತವಾಗಿ ಹೆಚ್ಚಾಗಿದೆ. ಮಳೆಗಾಲದಲ್ಲಿಯೂ ಇದೇ ರೀತಿ ಭಾರಿ ವಾಹನಗಳ ಸಂಚಾರ ಮುಂದುವರಿದರೆ ಆಗುಂಬೆ ಘಾಟ್‌ನ ಕಡಿದಾದ ತಿರುವುಗಳಲ್ಲಿ ಭೂಕುಸಿತ ಉಂಟಾಗುವ, ಭೀಕರ ಅಪಘಾತಗಳು ಸಂಭವಿಸುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುವ ಆತಂಕ ಎದುರಾಗಿದೆ.ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾವಿರಾರು ನಾಗರಿಕರು ತುರ್ತು ಚಿಕಿತ್ಸೆ ಹಾಗೂ ಆರೋಗ್ಯ ಸಮಸ್ಯೆಗಳಿಗಾಗಿ ಉಡುಪಿ, ಮಣಿಪಾಲ್ ಮತ್ತು ಮಂಗಳೂರಿನ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಒಂದು ವೇಳೆ ಭಾರಿ ವಾಹನಗಳ ಸಂಚಾರದಿಂದಾಗಿ ಆಗುಂಬೆ ಘಾಟ್ ಎಲ್ಲಾದರೂ ಕುಸಿದು ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆದಲ್ಲಿ, ಈ ನಾಲ್ಕೂ ಜಿಲ್ಲೆಗಳ ರೋಗಿಗಳಿಗೆ ಮತ್ತು ನಾಗರಿಕರಿಗೆ ಭಾರಿ ಸಮಸ್ಯೆಯಾಗಲಿದೆ. ಈ ಎಲ್ಲಾ ಗಂಭೀರ ಸೂಕ್ಷ್ಮತೆಗಳನ್ನು ಮನಗಂಡು ಶಿವಮೊಗ್ಗ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗಗಳಲ್ಲಿ ಚಲಿಸುವಂತೆ ಸೂಚಿಸಿದ್ದಾರೆ.

About The Author

Leave a Reply