

ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆ, ಕೇಂದ್ರ ಸರ್ಕಾರದ ಜನವಿರೋಧಿ ಹಾಗೂ ವಿಳಂಬ ನೀತಿಗಳಿಂದ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ವತಿಯಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ವಿವಿಧ ಬೇಡಿಕೆಗಳನ್ನೊಳಗೊಂಡ ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ WIM ಮಂಗಳೂರು ನಗರ ಅಧ್ಯಕ್ಷೆ ಆಯಿಷಾ ಯಾಸ್ಮಿನ್, ನಿರಂತರವಾಗಿ ಏರಿಕೆಯಾಗುತ್ತಿರುವ ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ಕೂಡಲೇ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಮಾತನಾಡಿ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳ ಪರಿಣಾಮವಾಗಿ ಮಹಿಳೆಯರು ಮತ್ತು ದುಡಿಯುವ ವರ್ಗದ ಜನರು ಜೀವನ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದು, ಜನಪರ ನೀತಿಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಮಹಿಳೆಯರ ಬದುಕಿನ ಮೇಲೆ ಇದರ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಕೂಡಲೇ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ WIM ಮುಖಂಡರು, ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.






