

ಧರ್ಮಸ್ಥಳ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಂಗಳವಾರ ಬೆಳಿಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ, ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿ ರಮೇಶ್ ಅವರ ಪುತ್ರಿ ಶ್ವೇತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಐದು ವರ್ಷಗಳಿಂದ ಶ್ವೇತಾ ಅವರ ಪೋಷಕರು ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಮಾಹಿತಿಯ ಪ್ರಕಾರ, ಶ್ವೇತಾ ಮಂಗಳವಾರ ಬೆಳಿಗ್ಗೆ ಎಂದಿನಂತೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದರು ಹಾಗೂ ತಾಯಿ ಮನೆಯಲ್ಲಿದ್ದರು. ಕಾಲೇಜಿಗೆ ಹೊರಡಬೇಕಾದ ಸಮಯದಲ್ಲಿ ಶ್ವೇತಾ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






