

ನೆಲ್ಯಾಡಿ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಿಗ್ಗೆ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್ ವಿ. (33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಗಿರೀಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಬಳಲುತ್ತಿದ್ದಾರೆ.
ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯ ಕಡೆಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದರು. ಪೆರಿಯಶಾಂತಿ ಸಮೀಪ ತಲುಪಿದಾಗ ತಮ್ಮ ಬೈಕನ್ನು ಕೊಕ್ಕಡ ರಸ್ತೆಯ ಕಡೆಗೆ ತಿರುಗಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಅದೇ ಮಾರ್ಗವಾಗಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ರಿಜೇಶ್ ಅವರ ಬೈಕ್, ಗಿರೀಶ್ ಅವರ ಬೈಕ್‌ಗೆ ಹಿಂಬದಿಯಿಂದ ಭೀಕರವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಿಜೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಇನ್ನೊಂದೆಡೆ ರಸ್ತೆಗೆ ಬಿದ್ದು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಗಿರೀಶ್ ಅವರನ್ನು ಸ್ಥಳೀಯರು ಹಾಗೂ ಹೆದ್ದಾರಿ ಸಂಚಾರಿ ಸಾರ್ವಜನಿಕರು ತಕ್ಷಣವೇ ರಕ್ಷಿಸಿದ್ದಾರೆ. ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮೃತ ರಿಜೇಶ್ ಅವರ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಹೆದ್ದಾರಿಯಲ್ಲಿ ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






