July 4, 2026
WhatsApp Image 2026-07-04 at 10.40.14 AM

ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು, ವಂಚನೆಯ ಹಣದ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅ.ಕ್ರ.104/2025ರಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣದ ತನಿಖೆ ವೇಳೆ ಆರೋಪಿಯನ್ನು ಜುಲೈ 3ರಂದು ವಶಕ್ಕೆ ಪಡೆಯಲಾಗಿದೆ.

ತನಿಖೆಯಲ್ಲಿ, ಆರೋಪಿಯು ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ, ಸೈಬರ್ ವಂಚನೆಯ ಮೂಲಕ ಬಂದ ಹಣದ ವರ್ಗಾವಣೆಗೆ ಬಳಸಲು ಸಹಕರಿಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರ ವಿಚಾರಣೆಯಲ್ಲಿ, ಜುಬೈರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2022ರ ಒಂದು ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಅಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯು ದಸ್ತಗಿರಿಯಿಂದ ತಪ್ಪಿಸಿಕೊಳ್ಳುತ್ತಿದ್ದ ಎಂಬ ಮಾಹಿತಿಯೂ ತನಿಖೆಯಲ್ಲಿ ಬಹಿರಂಗವಾಗಿದೆ.ಪ್ರಕರಣದ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

About The Author

Leave a Reply