July 7, 2026
WhatsApp Image 2026-07-07 at 12.34.18 PM

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

1950 ರ ಮೇ 2 ರಂದು ಸುಳ್ಯದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಗ್ರಾಮೀಣ ಭಾಗದ ಜನರ ಕಷ್ಟಕ್ಕೆ ಮಿಡಿಯುತ್ತಿದ್ದ ಇವರು, 1989ರಲ್ಲಿ ತಮ್ಮ ಸ್ವಗ್ರಾಮವಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಐತಿಹಾಸಿಕ ಪಯಣವನ್ನು ಆರಂಭಿಸಿದರು.

ದುರ್ಗಮ ಕಾಡುಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ನೂರಾರು ಪ್ರದೇಶಗಳಿಗೆ ಗಿರೀಶ್ ಅವರ ತೂಗು ಸೇತುವೆಗಳು ಜೀವನಾಡಿಯಾದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇವರ ಈ ಅದ್ವಿತೀಯ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ 2017 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಶ್ರೀ’ ನೀಡಿ ಗೌರವಿಸಿತ್ತು.

About The Author

Leave a Reply