July 17, 2026
WhatsApp Image 2026-07-17 at 10.22.33 AM

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ, ಕಲ್ಲಡ್ಕ ನರ್ಸಿಂಗ್ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಲಾವಣ್ಯ ಎಂಬ ಯುವತಿಯನ್ನು ಹಾಡುಹಗಲೇ ಸಾರ್ವಜನಿಕರ ಎದುರಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಅಮಾನವೀಯ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಹಲವು ಘಟನೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಡುಹಗಲೇ ಸಾರ್ವಜನಿಕ ಸ್ಥಳದಲ್ಲಿ ಇಂತಹ ಕೃತ್ಯ ನಡೆದಿರುವುದು ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ಆರೋಪಿ ಯಾರೇ ಆಗಿದ್ದರೂ ಅವರ ವಿರುದ್ಧ ಯಾವುದೇ ಮೃದು ಧೋರಣೆ ತೋರದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾನೂನಿನಡಿ ಕಠಿಣ ಕ್ರಮ ಕೈಗೊಂಡು ತ್ವರಿತ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜಿಲ್ಲೆಯ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಯಾವುದೇ ಭಯವಿಲ್ಲದೆ ಓಡಾಡುವಂತಹ ಸುರಕ್ಷಿತ ವಾತಾವರಣ ನಿರ್ಮಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಹಾಗೂ ಆಡಳಿತದ ಮೇಲಿದೆ. ಈ ದುರ್ಘಟನೆಯಿಂದ ಜಿಲ್ಲೆಯ ಮಹಿಳೆಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಹಿಳೆಯರ ಸುರಕ್ಷತೆಗೆ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ

About The Author

Leave a Reply