

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ BMW ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಸಂಚರಿಸುತ್ತಿತ್ತು. ಉಪ್ಪಿನಂಗಡಿ ದಾಟಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದ ವೇಳೆ ಕಾರಿನ ಮುಂಭಾಗದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೊಗೆ ಕಾಣಿಸಿಕೊಂಡಿದೆ.
ಇದನ್ನು ಗಮನಿಸಿದ ಚಾಲಕ ಕೂಡಲೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ತಕ್ಷಣ ಹೊರಬಂದಿದ್ದಾರೆ. ಅವರು ಸುರಕ್ಷಿತವಾಗಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿ, ವಾಹನ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.






