July 29, 2026
WhatsApp Image 2026-07-29 at 2.40.09 PM

ಬಂಟ್ವಾಳ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 

ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಆರೈಕೆ ನೋಡಿಕೊಳ್ಳುತ್ತಿದ್ದ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ತನ್ನ ಸ್ನೇಹಿತ ನರಿಕೊಂಬು ನಿವಾಸಿ ಸತೀಶ ನಾಯಕ್ (28)ನ ಸಹಾಯದಿಂದ ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಳು. ಆದರೆ, ಆ ಯತ್ನ ವಿಫಲವಾದ ಬಳಿಕ ಮತ್ತೋರ್ವ ಆರೋಪಿ ನರಿಕೊಂಬು ನಿವಾಸಿ ಚರಣ್ ಕುಮಾರ್ (31)ನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು.

ಬಳಿಕ ಮೃತೆಯ ಬಳಿ ಇದ್ದ ಸುಮಾರು 61.070 ಗ್ರಾಂ ತೂಕದ ಚಿನ್ನಾಭರಣಗಳನ್ನು (ಅಂದಿನ ಅಂದಾಜು ಮೌಲ್ಯ ರೂ.3 ಲಕ್ಷ) ದೋಚಿ, ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 22/2021ರಡಿ ಭಾರತೀಯ ದಂಡ ಸಂಹಿತೆಯ (IPC) ಕಲಂ 302, 392, 120(B), 201 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರಂಭಿಕ ಹಂತದಲ್ಲಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ಆಗಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಪೂರ್ಣಗೊಂಡ ಬಳಿಕ, ಜುಲೈ 28, 2026ರಂದು ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಸಮರ್ಥವಾಗಿ ವಾದ ಮಂಡಿಸಿದ್ದರು.

About The Author

Leave a Reply