

ಮಂಗಳೂರು : ಶಿವಶರಣ ಹಡಪದ ಅಪ್ಪಣ್ಣ ಅವರ ತತ್ವಗಳನ್ನು ಕೇವಲ ತಿಳಿದುಕೊಳ್ಳುವುದಷ್ಟೇ ಸಾಲದು, ಅವುಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಂಡಾಗಲೇ ಅವರ ಆದರ್ಶಗಳಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು.

ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಮಂಗಳೂರಿನ ಸಹಕಾರದೊಂದಿಗೆ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉರ್ವಾಸ್ಟೋರ್ ತುಳುಭವನದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿರು.
ಕ್ಷೌರಿಕ ವೃತ್ತಿಯ ಜೊತೆಗೆ ನಾನಾ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಸೇವೆಯಲ್ಲಿ ತೊಡಗಿರುವ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದ.ಕ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ಮಾತನಾಡಿ, ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಶಿವಶರಣ ಹಡಪದ ಅಪ್ಪಣ್ಣರು ನುಡಿದಂತೆ ನಡೆದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಸುಮಾರು 250 ವಚನಗಳನ್ನು ರಚಿಸಿದ್ದು, ಅವರ ಪತ್ನಿ ಲಿಂಗಮ್ಮ ಅವರು 150 ವಚನಗಳನ್ನು ರಚಿಸುವ ಮೂಲಕ ವಚನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಮಲೇಶ್ ಬಿ. ಹಡಪದ ಮಾತನಾಡಿ, ಜಿಲ್ಲೆಯ ನಾನಾ ಭಾಗಗಳಿಂದ ಸಮಾಜದ ಬಂಧುಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಸಂಘಕ್ಕೆ ಮತ್ತಷ್ಟು ಪ್ರೇರಣೆ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಆಳ್ವಾಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹರೀಶ್ ಟಿ.ಜಿ. ಅವರು ಹಡಪದ ಅಪ್ಪಣ್ಣರ ಜೀವನ, ತತ್ವ ಹಾಗೂ ವಚನ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸುಳ್ಯ, ಮೂಡಬಿದ್ರೆ, ಪುತ್ತೂರು, ಮುಲ್ಕಿ, ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಭಾಗಗಳಿಂದ 250ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗೊಲ್ಲಾಳಪ್ಪ ಎನ್. ಹಡಪದ, ಕಾರ್ಯದರ್ಶಿ ಮಹಾಂತೇಶ್ ಎಚ್. ಹಡಪದ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಆನಂದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ವಸಂತ್ ಎಂ., ಮಂಗಳೂರು ತಾಲೂಕು ಅಧ್ಯಕ್ಷ ಸುರೇಶ್ ಭಂಡಾರಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಬಬಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವರದಿ : ಧನುಷ್ ಕುಲಾಲ್ ಶಕ್ತಿನಗರ






