August 5, 2026
WhatsApp Image 2026-08-05 at 12.17.53 PM

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


ಘಟನೆಯ ವಿವರ : ಮಂಗಳವಾರ ಗುಜ್ಜರಕೆರೆ ಬಳಿಯಿರುವ ಚಹಾ ಅಂಗಡಿಯೊಂದರ ಬಳಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಜೂನಿಯರ್ ವಿದ್ಯಾರ್ಥಿಗಳು ನಿಂತಿದ್ದಾಗ, ದ್ವಿತೀಯ ವರ್ಷದ ಸುಮಾರು 4 ರಿಂದ 6 ಮಂದಿ ಹಿರಿಯ ವಿದ್ಯಾರ್ಥಿಗಳ ಗುಂಪು ಏಕಾಏಕಿ ದಾಳಿ ನಡೆಸಿದೆ. ಸಣ್ಣ ವಿಷಯಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡು, ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳ ಮೇಲೆ ಹಲ್ಲೆ ನಡೆಸಿ ಧಾಂದಲೆ ಸೃಷ್ಟಿಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಇಬ್ಬರೂ ವಿದ್ಯಾರ್ಥಿಗಳನ್ನು ತಕ್ಷಣವೇ ನಗರದ ಹೈಲ್ಯಾಂಡ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, “ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ಮೇಲ್ನೋಟಕ್ಕೆ ರ‍್ಯಾಗಿಂಗ್‌ ಪ್ರಕರಣದಂತೆ ಕಂಡುಬರುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಪ್ರಸ್ತುತ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಈ ಸಂಬಂಧ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

About The Author

Leave a Reply