

ಸುರತ್ಕಲ್ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಬಂಧಿತ ಆರೋಪಿ. ಆ.5ರಂದು ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಕಬ್ಬಿಣದ ಆಯುಧ ಬಳಸಿ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿದ ಆರೋಪಿ, ಕಾಣಿಕೆ ಹುಂಡಿಯನ್ನು ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು 15 ಸಾವಿರ ನಗದು ಕಳವಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದರು.
ಖಚಿತ ಮಾಹಿತಿ ಆಧರಿಸಿ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಮೂಲದ ಸುಖೇಶ್ ನಾಯ್ಕ್ (40) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದೈವಸ್ಥಾನದಲ್ಲಿ ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಸುಖೇಶ್ ನಾಯ್ಕ್ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ಆತ ಶಿಕ್ಷೆಗೊಳಗಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್‌ಗಳೂ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.







