

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ಕೈಗೊಂಡರು.
ಆರೋಪಿ ಗೋವಿಂದ ಉಡುಪಿಗೆ ತೆರಳಿ, ಅಲ್ಲಿಂದ ಹೈದರಾಬಾದ್ ಅಥವಾ ಮುಂಬೈ ಕಡೆಗೆ ರೈಲಿನಲ್ಲಿ ಪರಾರಿಯಾಗಲು ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ರೈಲು ನಿಲ್ದಾಣದ ಬಳಿ ಆತನನ್ನು ತಕ್ಷಣ ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯಲ್ಲಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.







